ಚಿಕ್ಕಮಗಳೂರು ಜಿಲ್ಲೆಯ ನಾಗರೀಕರ ಬಹುದಿನಗಳ ಕನಸಾದ ವೈದ್ಯಕೀಯ ಕಾಲೇಜು ಮುಂದಿನ ತಿಂಗಳು ಲೋಕಾರ್ಪಣೆಯಾಗಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ.

ವಿಧಾನಸಭೆ ನಡೆದ ಕಲಾಪದಲ್ಲಿ ಸಚಿವರು ಈ ಮಾಹಿತಿ ನೀಡಿದರು. 433.94 ಕೋಟಿ ರೂ. ವೆಚ್ಚದಲ್ಲಿ ಈ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವ ಮಂಜೂರಾತಿ ನೀಡಿ ಕಾಮಗಾರಿ ಆರಂಭಿಸಲಾಗಿತ್ತು. ಅದೀಗ ಶೇಕಡ 95ರಷ್ಟು ಪೂರ್ಣಗೊಂಡಿದ್ದು, ಉಳಿದ ಸಣ್ಣಪುಟ ಕೆಲಸಗಳು ಮುಂದಿನ ಕೆಲವೇ ದಿನಗಳಲ್ಲಿ ಪೂರ್ಣಗೊಳ್ಳಲಿವೆ ಎಂದರು.

ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ಈ ವೈದ್ಯಕೀಯ ಕಾಲೇಜಿನ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಈಗಾಗಲೇ ನೀಡಿರುವ ಉತ್ತರದಲ್ಲಿ ಸ್ಪಷ್ಟಪಡಿಸಿದ್ದೇನೆ ಎಂದು ತಿಳಿಸಿದರು.

ಈಗಾಗಲೇ ಸ್ಥಳೀಯ ಶಾಸಕರೊಂದಿಗೆ ಎರಡು ಮೂರು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಬಾಕಿ ಉಳಿದಿರುವ ಕೆಲಸ ಪೂರ್ಣಗೊಳಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ ಎಂದು ಡಾ. ಪಾಟೀಲ್‌ ಹೇಳಿದರು.

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗೆ 174 ಕೋಟಿ ರೂ.

ಈಗಾಗಲೇ ಈ ಕಾಲೇಜಿಗೆ ಸ್ಥಳಾಂತರವಾಗಿದೆ. ಬಹುತೇಕ ಸೌಲಭ್ಯವನ್ನು ಒದಗಿಸಿದ್ದೇವೆ. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು. 174 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕಾರ್ಯವೂ ನಡೆಯುತ್ತಿದೆ. ಇದಕ್ಕಾಗಿ ಹಣವನ್ನೂ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಇದನ್ನು ಕೂಡ ಎರಡು ಬಾರಿ ಖುದ್ದಾಗಿ ಪರಿಶೀಲಿಸಿ, ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದೇನೆ. ಅತ್ಯಾಧುನಿಕ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಮಾರ್ಚ್‌ ಅಂತ್ಯದೊಳಗೆ ಇದು ಪೂರ್ಣಗೊಳ್ಳಲಿದೆ ಎಂದು ವಿವರಿಸಿದರು.

ನರ್ಸಿಂಗ್‌ ಕಾಲೇಜು: ನರ್ಸಿಂಗ್‌ ಕಾಲೇಜು ಆರಂಭಿಸಬೇಕೆಂದು ಶಾಸಕರು ಮನವಿ ಸಲ್ಲಿಸಿದ್ದರು. ಅದನ್ನು ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ