ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಸಜೀವ ದಹನಗೊಂಡಿದ್ದು, ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಗೆ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಹೇಳಿದ್ದಾರೆ.
ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣ ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಪರಿಹಾರ ಘೋಷಣೆ ಮಾಡಿದ್ದಾರೆ.
ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್)ಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.





