ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದೆ. ಸಜೀವ ದಹನವಾದ ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಸಂಕಷ್ಟದ ಸಮಯದಲ್ಲಿ ಮೃತರ ಕುಟುಂಬಗಳ ಜೊತೆ ನಿಲ್ಲುವ ಭರವಸೆ ನೀಡಿರುವ ಅವರು, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಆರ್ಥಿಕ ನೆರವು ಘೋಷಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣ ‘X’ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಕರ್ನಾಟಕದ ಚಿತ್ರದುರ್ಗದಲ್ಲಿ ಸಂಭವಿಸಿದ ರಸ್ತೆ ಅಪಘಾತದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳನ್ನು ಸೂಚಿಸುತ್ತೇನೆ. ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ ಎಂದು ಬರೆದುಕೊಂಡಿದ್ದಾರೆ.

ಪರಿಹಾರ ಘೋಷಣೆ: ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪ್ರಧಾನಮಂತ್ರಿಯವರು ಆರ್ಥಿಕ ನೆರವು ಘೋಷಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಚಿಕಿತ್ಸಾ ನೆರವು ನೀಡುವುದಾಗಿ ತಿಳಿಸಿದ್ದಾರೆ.ಈ ಮೊತ್ತವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಪಾವತಿಸಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಬಸ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ರಭಸಕ್ಕೆ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿತ್ತು. ಲಾರಿ ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಇನ್ನೂ ಗಾಯಾಳುಗಳ ಪರಿಸ್ಥಿತಿ ಚಿಂತಾಜನಕವಾಗಿರುವುದರಿಂದ ಮೃತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಈ ಅಪಘಾತದಿಂದ ಬಸ್‌ನ ಚಾಲಕ ಹಾಗೂ ನಿರ್ವಹಕ ಗ್ರೇಟ್‌ ಎಸ್ಕೇಪ್‌ ಆಗಿದ್ದಾರೆ. ಇನ್ನೂ ಘಟನೆ ನಡೆದ ಸ್ಥಳದಲ್ಲಿ 30 ಕೀ.ಮಿ ರಸ್ತೆ ಸಂಪೂರ್ಣ ಟ್ರಾಪಿಕ್‌ ಜಾಮ್‌ ಆಗಿತ್ತು, ಅದನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ