ರಿಯಲ್ ಎಸ್ಟೇಟ್ ಸಂಸ್ಥೆ ಕಾನ್ಫಿಡೆಂಟ್​ ಗ್ರೂಪ್​ ಸಂಸ್ಥಾಪಕ ಹಾಗೂ ಅಧ್ಯಕ್ಷ ಸಿ.ಜೆ. ರಾಯ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (SIT) ತನಿಖೆ ಆರಂಭಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.

ಜನವರಿ 30ರಂದು ಬೆಂಗಳೂರು ನಗರದ ಅಶೋಕನಗರ ವ್ಯಾಪ್ತಿಯ ಕಚೇರಿಯಲ್ಲಿ ರಾಯ್ ಅವರು ಸೆಲ್ಫ್​ ಶೂಟ್​ ಮಾಡಿಕೊಂಡಿದ್ದರು.

ಘಟನೆ ವೇಳೆ ಅವರ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳ ಶೋಧ ಕಾರ್ಯ ನಡೆಯುತ್ತಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಪ್ರಕರಣವು ರಾಜ್ಯಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು..

ಈ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್ ಅವರು, ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ SIT ರಚಿಸಲಾಗಿದೆ. ತನಿಖೆ ಈಗಾಗಲೇ ಆರಂಭವಾಗಿದೆ. ವರದಿ ಬಂದ ಬಳಿಕವೇ ಸ್ಪಷ್ಟ ಚಿತ್ರಣ ದೊರೆಯಲಿದೆ. ತನಿಖೆ ಮುಗಿಯುವವರೆಗೆ ಯಾವುದೇ ಊಹಾಪೋಹಗಳಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಕೇರಳ ಮೂಲದವರಾದ ಸಿ.ಜೆ. ರಾಯ್ ಅವರ ಅಂತ್ಯಕ್ರಿಯೆ ಭಾನುವಾರ ಬ್ಯಾನರ್‌ಘಟ್ಟಾ ಸಮೀಪದ ಕಾನ್ಫಿಡೆಂಟ್​ Cascade ನಲ್ಲಿ ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು. ರಾಯ್ ಅವರ ಇಚ್ಛೆಯಂತೆ ಚರ್ಚ್‌ನಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಅಂತ್ಯಸಂಸ್ಕಾರ ನಡೆಸಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ