ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ.

ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಈ ಪಲ್ಲಕ್ಕಿ ಬಸ್ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ದೇವರಗುಡ್ಡದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಪಕ್ಕೀರಪ್ಪ, ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಯುವಂತೆ ಸೂಚಿಸಿದ್ದಾರೆ.

ಚಾಲಕನ ಈ ಸಮಯಪ್ರಜ್ಞೆಯಿಂದಾಗಿ ಭಾರಿ ದುರಂತವೊಂದು ತಪ್ಪಿದಂತಾಗಿದೆ. ಬೆಂಕಿ ಕಾಣಿಸಿಕೊಂಡ ಕೆಲವೇ ನಿಮಿಷಗಳಲ್ಲಿ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಧಗಧಗನೆ ಉರಿದಿದೆ. ಸಾರಿಗೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರಾದರೂ ಪ್ರಯೋಜನವಾಗಲಿಲ್ಲ. ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ