ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ.

ಸಾರಿಗೆ ಸಚಿವ ಬೈರತಿ ಸುರೇಶ್ ಈ ಯೋಜನೆಯನ್ನು ಘೋಷಿಸಿದ್ದು, ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ವಾಪಸ್ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗಂಡುಮಕ್ಕಳಿಗೂ ಈ ಸೌಲಭ್ಯ ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಉಚಿತ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದೆ.

ಬಡವ, ಶ್ರೀಮಂತ ಎನ್ನದೇ ಪ್ರತಿಯೊಬ್ಬ ಮಕ್ಕಳೂ ಆರ್ಥಿಕ ಹೊರೆ ಇಲ್ಲದೇ ತಮ್ಮ ವಿದ್ಯಾಭ್ಯಾಸ ಮಾಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶ. ಅದರಂತೆ ಮುಖ್ಯಮಂತ್ರಿಗಳು ಈ ಉಚಿತ ಬಸ್ ಪಾಸ್ ಯೋಜನೆಯನ್ನು ಘೋಷಣೆ ಮಾಡಿದ್ದರು. ಅದನ್ನು ಸಾರಿಗೆ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಸಾರಿಗೆ ಸಚಿವ ಭೈರತಿ ಸುರೇಶ್​ ಹೇಳಿದ್ದಾರೆ.

ವಿದ್ಯಾರ್ಥಿಗಳು ಒಂದೆರಡು ದಿನಗಳಲ್ಲಿ ಕರ್ನಾಟಕ ಒನ್, ಬೆಂಗಳೂರು ಒನ್ ಕಚೇರಿಗಳಲ್ಲಿ ಉಚಿತ ಬಸ್ ಪಾಸ್‌ಗೆ ನಿಗದಿತ ಅರ್ಜಿ ಸಲ್ಲಿಸಬೇಕು. ಇದನ್ನು ಪರಿಶೀಲನೆ ನಡೆಸಿದ ನಂತರ ಬಸ್ ಪಾಸ್ ಉಚಿತವಾಗಿ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್​ ಖರೀದಿಸಿರುವ ವಿದ್ಯಾರ್ಥಿಗಳಿಗೆ ಹಣವನ್ನು 15 ದಿನದ ಒಳಗೆ ವಾಪಸ್ ನೀಡಲಾಗುವುದು. ನಮ್ಮ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ