ರಾಜ್ಯದ ಮಹಿಳಾ ಪ್ರಯಾಣಿಕರಿಗಾಗಿ ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಸಂಚಾರಿಸಲು ಅವಕಾಶ ಕಲ್ಪಿಸಿರುವ ‘ಶಕ್ತಿ’ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ತರಲು ಸರ್ಕಾರ ಮುಂದಾಗಿದೆ.

ಯೋಜನೆ ಜಾರಿಯಾದ ದಿನದಿಂದಲೂ ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿ, ಬೇರೆ ರಾಜ್ಯಗಳ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿರುವ ದೂರುಗಳು ಕೇಳಿಬರುತ್ತಿವೆ. ಇದರಿಂದ ಸಾರಿಗೆ ನಿಗಮಗಳಿಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗುತ್ತಿದ್ದು, ಇದಕ್ಕೆ ಶಾಶ್ವತ ಕಡಿವಾಣ ಹಾಕಲು ಸಾರಿಗೆ ಇಲಾಖೆಯು ಸ್ಮಾರ್ಟ್ ಕಾರ್ಡ್ ವಿತರಣಾ ಪ್ರಕ್ರಿಯೆ ಚುರುಕುಗೊಳಿಸಿದೆ.

ವೋಟರ್ ಐಡಿ ಕಡ್ಡಾಯ: ಬೇರೆ ರಾಜ್ಯಗಳ ಮಹಿಳೆಯರ ಉಚಿತ ಪ್ರಯಾಣಕ್ಕೆ ಬ್ರೇಕ್ ಹಾಕಲು ರಾಜ್ಯದ ವೋಟರ್ ಐಡಿ ಹೊಂದಿರುವವರಿಗೆ ಮಾತ್ರ ಈ ಸ್ಮಾರ್ಟ್ ಕಾರ್ಡ್ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಫಲಾನುಭವಿಗಳು ತಮ್ಮ ವೋಟರ್ ಐಡಿ ಮತ್ತು ಆಧಾರ್ ಕಾರ್ಡ್ ಸಲ್ಲಿಸಿ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆದುಕೊಳ್ಳಬಹುದು. ಇದರಲ್ಲಿ ಫಲಾನುಭವಿಯ ಹೆಸರು, ಭಾವಚಿತ್ರ, ಆಧಾರ್ ಸಂಖ್ಯೆ, ವಿಳಾಸದ ಸಂಪೂರ್ಣ ವಿವರಗಳನ್ನು ಮುದ್ರಿಸಲಾಗಿರುತ್ತದೆ. ಈ ಕಾರ್ಡ್ ಅನ್ನು ಇತರರಿಗೆ ವರ್ಗಾಯಿಸಲು ಯಾವುದೇ ಅವಕಾಶವಿರುವುದಿಲ್ಲ. ರಾಜ್ಯಾದ್ಯಂತ ಒಟ್ಟು 3 ಕೋಟಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಮೆಟ್ರೋದಲ್ಲೂ ಸಂಚಾರ: ಸ್ಮಾರ್ಟ್ ಕಾರ್ಡ್ ವಿತರಣಾ ಪ್ರಕ್ರಿಯೆಯು ಪ್ರಾಯೋಗಿಕವಾಗಿ ಮೊದಲು ಬೆಂಗಳೂರಿನ ಬಿಎಂಟಿಸಿ ವ್ಯಾಪ್ತಿಯಲ್ಲಿ ಜಾರಿಗೆ ಬರಲಿದ್ದು, ನಂತರ ಉಳಿದ ಮೂರು ಸಾರಿಗೆ ನಿಗಮಗಳ ಮಹಿಳಾ ಪ್ರಯಾಣಿಕರಿಗೂ ವಿಸ್ತರಿಸಲಾಗುವುದು. ಬಿಎಂಟಿಸಿ ಈಗಾಗಲೇ ಗುತ್ತಿಗೆ ಆಧಾರದ ಮೇಲೆ 11 ಸಾವಿರ ಸುಧಾರಿತ ಇಟಿಎಂ ಯಂತ್ರಗಳನ್ನು ಪಡೆದಿದೆ. ಸ್ಮಾರ್ಟ್ ಕಾರ್ಡ್‌ಗಳಲ್ಲಿ ಅತ್ಯಾಧುನಿಕ ಎನ್‌ಎಫ್‌ಸಿ ತಂತ್ರಜ್ಞಾನ ಬಳಸಲಾಗುತ್ತಿದ್ದು, ಬಸ್ಸುಗಳ ಜೊತೆಗೆ ‘ನಮ್ಮ ಮೆಟ್ರೋ’ ಸಂಚಾರಕ್ಕೂ ಇವುಗಳನ್ನು ಬಳಸಲು ಅವಕಾಶ ಕಲ್ಪಿಸಲಾಗಿದೆ.

ಉಚಿತ ವಿತರಣೆ: ಮಹಿಳೆಯರಿಗೆ, ತೃತೀಯ ಲಿಂಗಿಗಳಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ಉಚಿತವಾಗಿ ವಿತರಿಸಲಾಗುತ್ರತದೆ. ಸಾರ್ವಜನಿಕರು ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ, ಸೈಬರ್ ಸೆಂಟರ್‌ಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಕಾರ್ಡ್‌ಗಳನ್ನು ಪಡೆದುಕೊಳ್ಳಬಹುದು. ರಾಜ್ಯದ ಎಲ್ಲಾ ಪ್ರಮುಖ ಬಸ್ ನಿಲ್ದಾಣಗಳಲ್ಲೂ ಸ್ಮಾರ್ಟ್ ಕಾರ್ಡ್ ವಿತರಣಾ ಕೌಂಟರ್‌ಗಳನ್ನು ತೆರೆಯಲಾಗುತ್ತದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ