– ರಾಘವೇಂದ್ರ ಅಡಿಗ ಎಚ್ಚೆನ್.
ಕುಮಾರ್ ಬಂಗಾರಪ್ಪ ಮತ್ತು ರಾಗಿಣಿ ದ್ವಿವೇದಿ ಅಭಿನಯದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ರಾಜಕಾರಣಿ ಎಲ್.ಆರ್. ಶಿವರಾಮೇಗೌಡ, ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು, ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್ ಸೇರಿದಂತೆ ರಾಜಕೀಯ ಹಾಗೂ ಚಿತ್ರರಂಗದ ಪ್ರಮುಖ ಗಣ್ಯರ ಸಮ್ಮುಖದಲ್ಲಿ ಈ ಚಿತ್ರದ ಟ್ರೇಲರ್ ಹಾಗೂ ಪೋಸ್ಟರ್ ಬಿಡುಗಡೆ ಆಗಿದೆ.

ಪಡಿತರ ವ್ಯವಸ್ಥೆ ವ್ಯವಹಾರದಲ್ಲಿ ನಡೆಯುವ ಅವ್ಯವಹಾರದ ಕುರಿತಂತೆ ಬೆಳಕು ಚೆಲ್ಲುವ ಕಥೆ ಇದಾಗಿದೆ. ಬಡವರ ಹಸಿವು ನೀಗಿಸಲು ಸರ್ಕಾರಗಳು ಪ್ರಾರಂಭಿಸಿರುವ ಪಡಿತರ ವಿತರಣೆ ವ್ಯವಸ್ಥೆ ಅಕ್ರಮ ಅವ್ಯವಹಾರಗಳಿಂದ ಸರಿಯಾದ ಗುರಿ ತಲುಪುವಲ್ಲಿ ವಿಫಲವಾಗಿದೆ. ಈ ರೀತಿಯ ಸಮಸ್ಯೆಗಳನ್ನು ಸಮಾಜದ ಮುಂದೆ ತೋರಿಸುವ ಉದ್ದೇಶದೊಂದಿಗೆ ಈ ಚಿತ್ರ ತಯಾರಾಗಿದೆ ಎಂದು ಮಾಜಿ ಸಂಸದ ಶಿವರಾಮೇಗೌಡ ಹೇಳಿದರು.

ಬಹಳ ದಿನಗಳ ನಂತರ ಸಾಮಾಜಿಕ ಕಳಕಳಿ ಇರುವ ಚಿತ್ರದಲ್ಲಿ ಅಭಿನಯಿಸುತ್ತಿರುವುದಕ್ಕೆ ಖುಷಿ ಇದೆ ಎಂದು ಕುಮರ್ ಬಂಗಾರಪ್ಪ ಹೇಳಿದ್ದಾರೆ. ನಾನು ಇದೇ ಮೊದಲ ಬಾರಿಗೆ ಪಾರ್ವತಿ ಎನ್ನುವ ಹಳ್ಳಿ ಹುಡುಗಿಯಾಗಿ ಪಾತ್ರ ಮಾಡಿದ್ದು ಮಂಡ್ಯ ಜಿಲ್ಲೆಯ ಹಳ್ಳಿಗಳಲ್ಲಿ ಚಿತ್ರೀಕರಣ ನಡೆಸಿರುವುದು ಹೊಸ ಅನುಭವ ಎಂದು ನಟಿ ರಾಗಿಣಿ ದ್ವಿವೇದಿ ಹೇಳಿಕೊಂಡಿದ್ದಾರೆ.

ಜಯಶಂಕರ ಟಾಕೀಸ್ ಬ್ಯಾನರಿನಲ್ಲಿ ನಿರ್ಮಾಣವಾಗುತ್ತಿರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರವನ್ನು ತೇಜು ಮೂರ್ತಿ ಮತ್ತು ಪದ್ಮಾವತಿ ಚಂದ್ರಶೇಖರ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಅನಂತ್ ಆರ್ಯನ್ ಸಂಗೀತ ಸಂಯೋಜಿಸುತ್ತಿದ್ದಾರೆ. ಬಿ.

ರಾಮಮೂರ್ತಿ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಇರುವ ‘ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರಕ್ಕೆ ಸಾತ್ವಿಕ್ ಪವನ್ ಕುಮಾರ್ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡಿದ್ದಾರೆ. ಚಿತ್ರೀಕರಣ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೇ ಜುಲೈ 31ಕ್ಕೆ ಚಿತ್ರ ರಾಜ್ಯಾದ್ಯಂತ ಸಿನಿಮಾ ಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ.





