ನೇಪಾಳ-ಟಿಬೆಟ್ ಗಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಭವಿಸಿರುವ ಹಠಾತ್ ಪ್ರವಾಹ ಮತ್ತು ಇತರ ಅವಘಡಗಳಿಂದ ಕರ್ನಾಟಕದ ಮೂವರು ಸೇರಿದಂತೆ ಒಟ್ಟು 23 ಮಂದಿ ಸಿಲುಕಿಕೊಂಡಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹಠಾತ್ ಪ್ರವಾಹದಿಂದ ಸಾವು-ನೋವು ಸಂಭವಿಸಿದ್ದು, ಪ್ರಮುಖ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿಯಾಗಿದೆ. ಹಲವು ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಹಾಗೂ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಪ್ರವಾಹ, ಭೂಕುಸಿತ, ರಸ್ತೆ ಬಂದ್ ಸೇರಿದಂತೆ ವಿವಿಧ ಕಾರಣಗಳಿಂದ ನೇಪಾಳದಲ್ಲಿ ಸಿಲುಕಿರುವ ಕರ್ನಾಟಕದ ನಿವಾಸಿಗಳನ್ನು ಪತ್ತೆಹಚ್ಚಿ ನೆರವು ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ತಿಳಿಸಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ಸಂಕಷ್ಟಕ್ಕೊಳಗಾಗಿರುವ ಕನ್ನಡಿಗರ ಸುರಕ್ಷತೆ ಹಾಗೂ ಯೋಗಕ್ಷೇಮದ ಕುರಿತು ವಿದೇಶಾಂಗ ಸಚಿವಾಲಯ ಮತ್ತು ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರವಾಹ ಪ್ರದೇಶದಲ್ಲಿ ಸಿಲುಕಿರುವವರ ಪ್ರಸ್ತುತ ಸ್ಥಳ, ಸುರಕ್ಷತಾ ಸ್ಥಿತಿ, ಸಂಪರ್ಕ ವಿವರಗಳು, ಪ್ರಯಾಣ ಅಥವಾ ಗುಂಪಿನ ಮಾಹಿತಿ ಹಾಗೂ ಪ್ರವಾಸ ಆಯೋಜಕರ ವಿವರಗಳನ್ನು ಸಂಗ್ರಹಿಸಲು ರಾಜ್ಯ ಸರ್ಕಾರ ವಿಶೇಷ ನಮೂನೆಯನ್ನು ಸಿದ್ಧಪಡಿಸಿದೆ.
ಈ ಮಾಹಿತಿಯ ಆಧಾರದ ಮೇಲೆ ವಿದೇಶಾಂಗ ಸಚಿವಾಲಯ, ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿ, ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪ್ರವಾಸ ಆಯೋಜಕರೊಂದಿಗೆ ಸಮನ್ವಯ ಸಾಧಿಸಿ ರಕ್ಷಣೆ, ಸ್ಥಳಾಂತರ ಹಾಗೂ ಅಗತ್ಯ ನೆರವು ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವು ಪರಿಸ್ಥಿತಿಯನ್ನು 24 ಗಂಟೆಯೂ ಮೇಲ್ವಿಚಾರಣೆ ಮಾಡುತ್ತಿದೆ. ಕರ್ನಾಟಕ ಭವನದ ನಿವಾಸಿ ಆಯುಕ್ತರು ರಚಿಸಿರುವ ವಿಶೇಷ ತಂಡಗಳು ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿವೆ. ಎಸ್‌ಇಒಸಿ ಹಾಗೂ ಕರ್ನಾಟಕ ಭವನವು ವಿದೇಶಾಂಗ ಸಚಿವಾಲಯದ ತ್ವರಿತ ಪ್ರತಿಕ್ರಿಯಾ ತಂಡಗಳು, ಕಠ್ಮಂಡು ಮತ್ತು ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು ಹಾಗೂ ಕೇಂದ್ರ ಗೃಹ ಸಚಿವಾಲಯದ ಸಮಗ್ರ ನಿಯಂತ್ರಣ ಕೊಠಡಿಯೊಂದಿಗೆ ಸಂಪರ್ಕದಲ್ಲಿವೆ ಎಂದು ಮಾಹಿತಿ ನೀಡಿದ್ದಾರೆ.





