ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದ್ದು, ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ ನಡೆಯಲಿದೆ.

ಹಾಸನಾಂಬಾ ದೇವಾಲಯದ ಗರ್ಭಗುಡಿ ಬಾಗಿಲು ಅಕ್ಟೋಬರ್ 29ರಂದು ಮಧ್ಯಾಹ್ನ 12 ಗಂಟೆಗೆ ತೆರೆಯಲಿದೆ. ಜಾತ್ರೆಯ ಮೊದಲ ದಿನ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ. ದೇವಾಲಯದ ಸಂಪ್ರದಾಯ ಹಾಗೂ ಶಾಸ್ತ್ರೋಕ್ತ ವಿಧಿವಿಧಾನಗಳು ಪೂರ್ಣಗೊಂಡ ಬಳಿಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಜಾತ್ರಾ ಮಹೋತ್ಸವದ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ್ದು, ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಜಾತ್ರೆ ನಡೆಯಲಿದೆ ಎಂದು ತಿಳಿಸಿದ್ದಾರೆ.ಮೊದಲ ಮತ್ತು ಕೊನೆಯ ದಿನ ಹೊರತುಪಡಿಸಿ ಒಟ್ಟು 12 ದಿನಗಳ ಕಾಲ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ನವೆಂಬರ್ 11ರಂದು ಶಾಸ್ತ್ರೋಕ್ತ ವಿಧಿವಿಧಾನಗಳೊಂದಿಗೆ ದೇವಾಲಯದ ಗರ್ಭಗುಡಿ ಬಾಗಿಲು ಮತ್ತೆ ಮುಚ್ಚಲಾಗುತ್ತದೆ.

ಹಾಸನಾಂಬೆಯ ದರ್ಶನಕ್ಕಾಗಿ ಪ್ರತಿವರ್ಷ ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧ ಭಾಗಗಳಿಂದಲೂ ಭಕ್ತರು ಹಾಸನಕ್ಕೆ ಆಗಮಿಸುತ್ತಾರೆ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆಯ ದರ್ಶನ ಪಡೆಯಲು ಭಕ್ತರು ಕಾತರದಿಂದ ಕಾಯುತ್ತಿದ್ದು, ಈ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ.

ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ದರ್ಶನ ವ್ಯವಸ್ಥೆ, ಮೂಲಸೌಕರ್ಯ, ಭದ್ರತೆ ಹಾಗೂ ಇತರ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ವಿವಿಧ ಸಮಿತಿಗಳನ್ನು ರಚಿಸಿದೆ.

ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಜನಸಂದಣಿ ಹೆಚ್ಚಾಗುವ ಹಿನ್ನೆಲೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಿ, ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬಾರದಂತೆ ಜಾತ್ರಾ ಮಹೋತ್ಸವವನ್ನು ವ್ಯವಸ್ಥಿತವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಾತ್ರೆಯ ಅಂಗವಾಗಿ ಆಹಾರ ಮೇಳ, ಚಿತ್ರಸಂತೆ ಹಾಗೂ ಸಾಹಿತ್ಯ ವೈಭವ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಾತ್ರಾ ಮಹೋತ್ಸವದ ವೇಳಾಪಟ್ಟಿ, ಪೋಸ್ಟರ್ ಬಿಡುಗಡೆ, ವೆಬ್‌ಸೈಟ್ ಲಾಂಚ್ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 26ರಂದು ನಡೆಸಲು ನಿರ್ಧರಿಸಲಾಗಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ