– ರಾಘವೇಂದ್ರ ಅಡಿಗ ಎಚ್ಚೆನ್.
ಕನ್ನಡ ಕಿರುತೆರೆಯ ಜನಪ್ರಿಯ ನಟಿ ಐಶ್ವರ್ಯಾ ಪಿಸ್ಸೆ ಅವರು ತಮ್ಮ ಪತಿಯಿಂದ ವಿಚ್ಛೇದನ ಪಡೆದಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಅವರು, ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ಪಡೆದಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
‘ಅನುರೂಪ’, ‘ಸರ್ವಮಂಗಳ ಮಾಂಗಲ್ಯೇ’, ‘ಸುಂದರಿ ಮಾಂಗಲ್ಯ’ ಹಾಗೂ ‘ಪುನರ್ ವಿವಾಹ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಐಶ್ವರ್ಯಾ ಪಿಸ್ಸೆ, ಕಿರುತೆರೆ ಪ್ರೇಕ್ಷಕರಿಗೆ ಪರಿಚಿತ ಮುಖ. ಧಾರಾವಾಹಿಗಳಲ್ಲಿ ಮನೆ ಮಗಳು ಹಾಗೂ ಸೊಸೆಯ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ನಟಿ, ಇದೀಗ ತಮ್ಮ ವೈಯಕ್ತಿಕ ಜೀವನದ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ.
ಒಂದೂವರೆ ವರ್ಷದಿಂದ ಪ್ರತ್ಯೇಕ ವಾಸ
ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಐಶ್ವರ್ಯಾ ಪಿಸ್ಸೆ, ತಮ್ಮ ವೈಯಕ್ತಿಕ ಜೀವನದ ಕುರಿತು ಹರಡುತ್ತಿರುವ ವದಂತಿಗಳಿಗೆ ತೆರೆ ಎಳೆಯುವ ಉದ್ದೇಶದಿಂದ ಈ ಸ್ಪಷ್ಟನೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಸಾಕಷ್ಟು ಯೋಚನೆ ನಡೆಸಿದ ಬಳಿಕ, ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ಪಡೆಯುವ ನಿರ್ಧಾರ ಕೈಗೊಂಡಿದ್ದೇವೆ. ಇದು ನಮ್ಮಿಬ್ಬರ ವೈಯಕ್ತಿಕ ನಿರ್ಧಾರವಾಗಿದ್ದು, ಈ ಸಂದರ್ಭದಲ್ಲಿ ಅಗತ್ಯವಿರುವ ಖಾಸಗಿತನ ಮತ್ತು ನೆಮ್ಮದಿಯನ್ನು ಗೌರವಿಸಬೇಕು ಎಂದು ಅಭಿಮಾನಿಗಳು ಹಾಗೂ ಹಿತೈಷಿಗಳಲ್ಲಿ ಮನವಿ ಮಾಡಿದ್ದಾರೆ.
ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮದ ಎಚ್ಚರಿಕೆ
ತಮ್ಮ ವೈಯಕ್ತಿಕ ಜೀವನದ ಕುರಿತು ಸುಳ್ಳು ಕಥೆಗಳನ್ನು ಸೃಷ್ಟಿಸುವುದು, ದಾರಿ ತಪ್ಪಿಸುವ ವಿಡಿಯೋಗಳನ್ನು ಪ್ರಕಟಿಸುವುದು ಹಾಗೂ ಆಧಾರರಹಿತ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ನಟಿ ಎಚ್ಚರಿಸಿದ್ದಾರೆ. ವೀಕ್ಷಣೆ, ಲೈಕ್ಸ್ ಮತ್ತು ಫಾಲೋವರ್ಸ್ ಹೆಚ್ಚಿಸಿಕೊಳ್ಳಲು ತಮ್ಮ ಧಾರಾವಾಹಿಗಳ ದೃಶ್ಯಗಳನ್ನು ಸಂದರ್ಭಕ್ಕೆ ಸಂಬಂಧವಿಲ್ಲದಂತೆ ಬಳಸಿಕೊಳ್ಳುವುದಕ್ಕೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ತೆರೆಯ ಮೇಲಿನ ಜೀವನಕ್ಕೂ ನಿಜ ಜೀವನಕ್ಕೂ ವ್ಯತ್ಯಾಸವಿದೆ ಎಂಬುದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ವದಂತಿಗಳನ್ನು ಹರಡುವುದನ್ನು ನಿಲ್ಲಿಸಿ, ತಮ್ಮ ಖಾಸಗಿತನವನ್ನು ಗೌರವಿಸುವಂತೆ ಮನವಿ ಮಾಡಿದ್ದಾರೆ.
ತಮ್ಮ ವೃತ್ತಿ ಮತ್ತು ವೈಯಕ್ತಿಕ ಜೀವನ ಎರಡೂ ಬೇರೆಬೇರೆ ವಿಚಾರಗಳಾಗಿದ್ದು, ಸುಳ್ಳು ಹಾಗೂ ಮಾನಹಾನಿಕರ ವಿಷಯಗಳನ್ನು ಕಾನೂನು ಮಾರ್ಗಗಳ ಮೂಲಕ ಎದುರಿಸುವುದಾಗಿ ತಿಳಿಸಿದ್ದಾರೆ. ಇಂತಹ ಕೃತ್ಯಗಳು ಮುಂದುವರಿದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.





