–  ರಾಘವೇಂದ್ರ ಅಡಿಗ ಎಚ್ಚೆನ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್‌ಗೆ ಇದೀಗ ಜೈಲಿನಲ್ಲೇ ವೈದ್ಯಕೀಯ ಚಿಕಿತ್ಸೆ ಆರಂಭಿಸಲಾಗಿದೆ. ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ದರ್ಶನ್‌ಗೆ ನ್ಯಾಯಾಲಯದ ನಿರ್ದೇಶನದಂತೆ ಫಿಸಿಯೋಥೆರಪಿ ವ್ಯವಸ್ಥೆ ಮಾಡಲಾಗಿದೆ.

ನ್ಯಾಯಾಲಯದ ಸೂಚನೆಯ ಹಿನ್ನೆಲೆಯಲ್ಲಿ ಜೈಲಾಧಿಕಾರಿಗಳು ವೈದ್ಯಕೀಯ ನೆರವು ಕೋರಿದ್ದರು. ಹೀಗಾಗಿ ಸಂಜಯ್ ಗಾಂಧಿ ಆಸ್ಪತ್ರೆಯ ಫಿಸಿಯೋಥೆರಪಿ ತಜ್ಞ ವೈದ್ಯರ ತಂಡ ಜೈಲಿಗೆ ಭೇಟಿ ನೀಡಿ ಚಿಕಿತ್ಸೆ ಆರಂಭಿಸಿದೆ.

ಮೊದಲ ದಿನವೇ ದರ್ಶನ್ ಅವರ ಬ್ಯಾರಕ್‌ನಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿದೆ. ಅವರ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರತಿ ಎರಡು ಅಥವಾ ಮೂರು ದಿನಗಳಿಗೊಮ್ಮೆ ಚಿಕಿತ್ಸೆ ಮುಂದುವರಿಸಲು ವ್ಯವಸ್ಥೆ ಮಾಡಲಾಗಿದೆ.

ಈ ಹಿಂದೆಯೂ ಸಂಜಯ್ ಗಾಂಧಿ ಆಸ್ಪತ್ರೆಯ ವೈದ್ಯರು ದರ್ಶನ್‌ಗೆ ಹಂತ ಹಂತವಾಗಿ ಫಿಸಿಯೋಥೆರಪಿ ನೀಡಿದ್ದರು. ಆ ಸಂದರ್ಭದಲ್ಲಿ ಬೆನ್ನುನೋವು ಗಣನೀಯವಾಗಿ ಕಡಿಮೆಯಾಗಿತ್ತು ಎಂದು ತಿಳಿದುಬಂದಿದೆ.

ಇದೀಗ ಕೋರ್ಟ್ ಆದೇಶದಂತೆ ಜೈಲಿನಲ್ಲೇ ಚಿಕಿತ್ಸೆ ಮುಂದುವರಿಯಲಿದೆ. ವೈದ್ಯಕೀಯ ತಂಡಕ್ಕೆ ಅಗತ್ಯ ಸೌಲಭ್ಯಗಳನ್ನು ಜೈಲಾಧಿಕಾರಿಗಳು ಒದಗಿಸಿದ್ದಾರೆ. ವೈದ್ಯರ ಮೇಲ್ವಿಚಾರಣೆಯಲ್ಲಿ ದರ್ಶನ್ ಆರೋಗ್ಯದಲ್ಲಿ ಎಷ್ಟು ಸುಧಾರಣೆ ಕಂಡುಬರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ