ರಾಘವೇಂದ್ರ ಅಡಿಗ ಎಚ್ಚೆನ್.
ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರಿಗೆ ನ್ಯಾಯಾಲಯದಿಂದ ಮಹತ್ವದ ರಿಲೀಫ್ ದೊರೆತಿದೆ. ಫಿಸಿಯೋಥೆರಪಿ ಚಿಕಿತ್ಸೆಯ ಅಗತ್ಯವಿದ್ದರೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ನ್ಯಾಯಾಲಯ ಅನುಮತಿ ನೀಡಿದೆ.
ಜೈಲಿನಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯ ಹಾಗೂ ಚಿಕಿತ್ಸೆ ದೊರೆಯುತ್ತಿಲ್ಲ. ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ದರ್ಶನ್ ಅವರಿಗೆ ಫಿಸಿಯೋಥೆರಪಿ ಚಿಕಿತ್ಸೆಯ ಅಗತ್ಯವಿದೆ. ಹೀಗಾಗಿ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು ಎಂದು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ದರ್ಶನ್ ಅವರಿಗೆ ಫಿಸಿಯೋಥೆರಪಿ ಅಗತ್ಯವಿದ್ದಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬಹುದು ಎಂದು ಆದೇಶಿಸಿದೆ.
ಇದೇ ವೇಳೆ, ಆದೇಶವನ್ನು ಇಂದೇ ಜೈಲು ಅಧಿಕಾರಿಗಳಿಗೆ ತಲುಪಿಸುವಂತೆ ದರ್ಶನ್ ಪರ ವಕೀಲರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ನ್ಯಾಯಾಲಯ, ಆದೇಶದ ಪ್ರತಿಯನ್ನು ಇ-ಮೇಲ್ ಮೂಲಕ ತಕ್ಷಣವೇ ಜೈಲು ಅಧಿಕಾರಿಗಳಿಗೆ ರವಾನಿಸುವಂತೆ ಸೂಚನೆ ನೀಡಿದೆ.
ಇನ್ನೊಂದೆಡೆ, ಈ ಅರ್ಜಿಗೆ ಸಂಬಂಧಿಸಿದಂತೆ ಸೋಮವಾರದೊಳಗೆ ಆಕ್ಷೇಪಣೆ ಸಲ್ಲಿಸುವಂತೆ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ (ಎಸ್ಪಿಪಿ) ನ್ಯಾಯಾಲಯ ನಿರ್ದೇಶನ ನೀಡಿದೆ.





