- ರಾಘವೇಂದ್ರ ಅಡಿಗ ಎಚ್ಚೆನ್.
ಬಿಡುಗಡೆಗೆ ಸಜ್ಜಾಗಿರುವ ‘ಕರಾವಳಿ’ ಚಿತ್ರದ ಸುತ್ತಮುತ್ತ ಸೃಷ್ಟಿಯಾಗಿರುವ ವಿವಾದದ ಬಗ್ಗೆ ನಟ ರಾಜ್ ಬಿ ಶೆಟ್ಟಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಚಿತ್ರರಂಗದ ಪರವಾಗಿ ಕನ್ನಡ ಸಿನಿಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೋರಿದ್ದಾರೆ. ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಡೆದ ಗಲಾಟೆ ಹಾಗೂ ನಿರ್ಮಾಪಕ-ನಿರ್ದೇಶಕರ ನಡುವಿನ ಭಿನ್ನಾಭಿಪ್ರಾಯಗಳು ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಅವರು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಮಾತನಾಡಿರುವ ರಾಜ್ ಬಿ ಶೆಟ್ಟಿ, ‘ಕೆಜಿಎಫ್’, ‘ಕಾಂತಾರ’ ಚಿತ್ರದಂತಹ ಯಶಸ್ಸುಗಳ ಸಂದರ್ಭದಲ್ಲಿ ಕನ್ನಡ ಸಿನಿಮಾ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ನಾವು, ಇದೇ ಚಿತ್ರರಂಗದಲ್ಲಿ ಇಂತಹ ವಿವಾದಗಳು ನಡೆದಾಗ ನೋವು ಅನುಭವಿಸಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
“ಇಲ್ಲಿ ಯಾರು ಸರಿ, ಯಾರು ತಪ್ಪು ಎಂಬುದಕ್ಕಿಂತ ಕನ್ನಡ ಸಿನಿಮಾ ಪ್ರೇಕ್ಷಕರ ಮುಂದೆ ನಾವು ಈ ರೀತಿಯಾಗಿ ಕಾಣಿಸಿಕೊಳ್ಳುತ್ತಿರುವುದು ಬೇಸರದ ಸಂಗತಿ. ಚಿತ್ರರಂಗದ ಸದಸ್ಯನಾಗಿ ನಾನು ಇಡೀ ಕನ್ನಡ ಸಿನಿಪ್ರೇಕ್ಷಕರಲ್ಲಿ ಕ್ಷಮೆ ಕೇಳುತ್ತೇನೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.
ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸಿರುವ ‘ಕರಾವಳಿ’ ಚಿತ್ರದಲ್ಲಿ ತಾವು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅದು ಕಥೆಗೆ ಮಹತ್ವದ ಪಾತ್ರವಾಗಿದೆ ಎಂದು ರಾಜ್ ಬಿ ಶೆಟ್ಟಿ ತಿಳಿಸಿದ್ದಾರೆ. ಚಿತ್ರದಲ್ಲಿ ಸಂಪದಾ, ಮಿತ್ರ, ರಮೇಶ್ ಇಂದಿರಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದು, ಉತ್ತಮ ಸಿನಿಮಾ ನಿರ್ಮಿಸಲು ನಿರ್ದೇಶಕ ಗುರುದತ್ ಗಾಣಿಗಾ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಿಡುಗಡೆಗೂ ಮುನ್ನವೇ ಚಿತ್ರ ವಿವಾದಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ರಾಜ್ ಬಿ ಶೆಟ್ಟಿ ನೀಡಿರುವ ಈ ಪ್ರತಿಕ್ರಿಯೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.





