- ರಾಘವೇಂದ್ರ ಅಡಿಗ ಎಚ್ಚೆನ್.
ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರ ಜನ್ಮದಿನದ ಅಂಗವಾಗಿ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ನಿರ್ಮಾಪಕರು ಅಭಿಮಾನಿಗಳಿಗೆ ವಿಶೇಷ ಕಾಣಿಕೆ ನೀಡಿದ್ದಾರೆ. ಚಿತ್ರದ ಪ್ರಮುಖ ಪಾತ್ರ ‘ನಾಡಿಯಾ’ ಅವರ ಹೊಸ ಭಿತ್ತಿಚಿತ್ರವನ್ನು ಬಿಡುಗಡೆ ಮಾಡಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಹೊಸ ಭಿತ್ತಿಚಿತ್ರದಲ್ಲಿ ಕಿಯಾರಾ ಅಡ್ವಾಣಿ ಕೆಂಪು ಬಣ್ಣದ ಆಕರ್ಷಕ ಉಡುಪಿನಲ್ಲಿ, ಗಾಢ ಕೆಂಪು ತುಟಿ ರಂಗಿನೊಂದಿಗೆ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಕಿಲ್ಲರ್ ಎಕ್ಸ್‌ಪ್ರೆಶನ್ ಮತ್ತು ಸ್ಟೈಲಿಶ್ ಗೆಟಪ್ ಸಿನಿರಸಿಕರ ಗಮನ ಸೆಳೆಯುತ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಈ ಹಿಂದೆ ಬಿಡುಗಡೆಯಾಗಿದ್ದ ‘ತಬಾಹಿ’ ಹಾಡಿನಲ್ಲಿ ಯಶ್ ಮತ್ತು ಕಿಯಾರಾ ನಡುವಿನ ರೊಮ್ಯಾಂಟಿಕ್ ದೃಶ್ಯಗಳು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದವು. ಚಿತ್ರದಲ್ಲಿ ಕಿಯಾರಾ ಸರ್ಕಸ್‌ನ ಪ್ರಮುಖ ಪ್ರದರ್ಶನಕಾರ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಅವರ ಪಾತ್ರ ಕಥೆಯ ಪ್ರಮುಖ ತಿರುವುಗಳಿಗೆ ಕಾರಣವಾಗಲಿದೆ ಎನ್ನಲಾಗಿದೆ.
ಇದಕ್ಕೂ ಮುನ್ನ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕಿಯಾರಾ, ‘ಟಾಕ್ಸಿಕ್’ ಸಾಮಾನ್ಯ ವಾಣಿಜ್ಯ ಸಿನಿಮಾ ಅಲ್ಲ. ಇದು ಮಹಿಳಾ ಪಾತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾ ಎಂದು ಹೇಳುವ ಮೂಲಕ ಕುತೂಹಲ ಹೆಚ್ಚಿಸಿದ್ದರು.
ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಿಸುತ್ತಿವೆ. ಯಶ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಈ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಜೊತೆಗೆ ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಹಾಗೂ ರುಕ್ಮಿಣಿ ವಸಂತ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ





