- ರಾಘವೇಂದ್ರ ಅಡಿಗ ಎಚ್ಚೆನ್.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾಗೌಡ ಅವರಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯಗಳು ಹಾಗೂ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದ ಸಂಧ್ಯಾ ನಾಗರಾಜ್ ವಿರುದ್ಧ ಇದೀಗ ದೂರು ದಾಖಲಾಗಿದೆ.
ಇತ್ತೀಚೆಗೆ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಪವಿತ್ರಾಗೌಡ ಅವರಿಗೆ ಅಧಿಕಾರಿಗಳು ವಿಶೇಷ ಸಹಕಾರ ನೀಡುತ್ತಿದ್ದಾರೆ. ಪ್ರತಿದಿನ ಹೊರಗಿನಿಂದ ಆಹಾರವನ್ನು ಬಾಕ್ಸ್ ಮೂಲಕ ತಲುಪಿಸಲಾಗುತ್ತಿದೆ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.
ಈ ಹೇಳಿಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಪವಿತ್ರಾಗೌಡ, ಜೈಲಿನಲ್ಲಿದ್ದೇ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ಅಧಿಕೃತ ದೂರು ಸಲ್ಲಿಸಿದ್ದಾರೆ. ತಮ್ಮ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ ಮಾನಹಾನಿಗೆ ಯತ್ನಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಕರಣದ ಮತ್ತೊಬ್ಬ ಆರೋಪಿ ರಶ್ಮಿ ಕೂಡ ಸಂಧ್ಯಾ ನಾಗರಾಜ್ ವಿರುದ್ಧ ಪ್ರತ್ಯೇಕ ದೂರು ನೀಡಿರುವುದು ಗಮನಾರ್ಹವಾಗಿದೆ. ಆರೋಪಗಳ ಸತ್ಯಾಸತ್ಯತೆ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಇದೀಗ ಜೈಲಿನೊಳಗಿನ ಸೌಲಭ್ಯಗಳ ಕುರಿತು ಎದ್ದಿರುವ ವಿವಾದ ಮತ್ತೊಂದು ಹಂತ ತಲುಪಿದ್ದು, ಸಂಧ್ಯಾ ನಾಗರಾಜ್ ಹೇಳಿಕೆಗಳು ಹಾಗೂ ಪವಿತ್ರಾಗೌಡ ಸಲ್ಲಿಸಿರುವ ದೂರಿನ ಆಧಾರದ ಮೇಲೆ ಮುಂದಿನ ತನಿಖೆ ನಡೆಯಲಿದೆ.





