- ರಾಘವೇಂದ್ರ ಅಡಿಗ ಎಚ್ಚೆನ್.
ಕನ್ನಡ ಭಾಷೆ, ಸಾಹಿತ್ಯ ಮತ್ತು ವೈದ್ಯಕೀಯ ವಿಜ್ಞಾನವನ್ನು ಬೆಸೆಯುವ ಮಹತ್ವದ ಪ್ರಯತ್ನವಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಇದೇ ಮೊದಲ ಬಾರಿಗೆ ಪ್ರಥಮ ಕನ್ನಡ ಸಮಗ್ರ ವೈದ್ಯಕೀಯ ಸಾಹಿತ್ಯ ಸಮ್ಮೇಳನ – 2026 ಆಯೋಜಿಸಲಾಗುತ್ತಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ. ತಿಳಿಸಿದರು.
ಮಂಗಳವಾರ, ವಿವಿಯ ಸುಶ್ರುತ ಸಭಾಂಗಣದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ವಿವರ ನೀಡಿದ ಅವರು, ವಿಶ್ವವಿದ್ಯಾಲಯದ ಮೂರು ದಶಕಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಈ ಸಮ್ಮೇಳನವು ಕನ್ನಡ ವೈದ್ಯಕೀಯ ಸಾಹಿತ್ಯವನ್ನು ಸಮೃದ್ಧಗೊಳಿಸುವ, ವೈದ್ಯಕೀಯ ಜ್ಞಾನವನ್ನು ಜನಸಾಮಾನ್ಯರಿಗೆ ಮಾತೃಭಾಷೆಯಲ್ಲಿ ತಲುಪಿಸುವ ಹಾಗೂ ವಿಜ್ಞಾನ ಮತ್ತು ಸಾಹಿತ್ಯದ ನಡುವೆ ಹೊಸ ಸೇತುವೆ ನಿರ್ಮಿಸುವ ಮಹತ್ವದ ಪ್ರಯತ್ನವಾಗಿದೆ ಎಂದರು.

ನವೆಂಬರ್ 20ರಂದು ಬೆಂಗಳೂರಿನ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್, ವಿಧಾನಸಭೆಯ ಸಭಾಧ್ಯಕ್ಷ ಶ್ರೀ ಯು.ಟಿ. ಖಾದರ್, ಹಿರಿಯ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶ್ರೀ ಮೊಹಮ್ಮದ್ ಮೊಹಸಿನ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ಡಾ. ಎಸ್.ಪಿ. ಯೋಗಣ್ಣ ಸಮ್ಮೇಳನದ ಸರ್ವಾಧ್ಯಕ್ಷರಾಗಿರುತ್ತಾರೆ.
ನವೆಂಬರ್ 21ರಂದು ಮಧ್ಯಾಹ್ನ 3.20ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಹಿರಿಯ ಸಾಹಿತಿ ನಾಡೋಜ ಡಾ. ಹಂಪನಾ ಸಮಾರೋಪ ಭಾಷಣ ಮಾಡಲಿದ್ದಾರೆ. ಶ್ರೀ ಮೊಹಮ್ಮದ್ ಮೊಹಸಿನ್ ವಿಶೇಷ ಆಹ್ವಾನಿತರಾಗಿರುತ್ತಾರೆ ಎಂದು ಮಾಹಿತಿ ನೀಡಿದರು.
ಕನ್ನಡದಲ್ಲಿಯೇ ವೈದ್ಯಕೀಯ ಶಿಕ್ಷಣವನ್ನು ನೀಡುವುದು, ಹೊರರಾಜ್ಯಗಳ ವಿದ್ಯಾರ್ಥಿಗಳಿಗೆ ಕನ್ನಡವನ್ನು ಐಚ್ಛಿಕ ಭಾಷೆಯಾಗಿ ಬೋಧಿಸುವುದು, ಕನ್ನಡದಲ್ಲಿಯೇ ವೈದ್ಯಕೀಯ ಶಿಕ್ಷಣದ ಪಠ್ಯಕ್ರಮ ರೂಪಿಸುವುದು ಹಾಗೂ ಕನ್ನಡ ಭಾಷೆಯಲ್ಲಿಯೇ ಪರೀಕ್ಷೆಗಳನ್ನು ನಡೆಸುವುದು ಸೇರಿದಂತೆ ಆರೋಗ್ಯ ಕ್ಷೇತ್ರದ ವಿವಿಧ ಹಂತಗಳಲ್ಲಿ ಕನ್ನಡವನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಈ ಸಮ್ಮೇಳನವು ಮಹತ್ವದ ವೇದಿಕೆಯಾಗಲಿದೆ ಎಂದರು.

ವೈದ್ಯಕೀಯ ಜ್ಞಾನವು ಕೇವಲ ವೈದ್ಯಕೀಯ ಸಂಸ್ಥೆಗಳು ಮತ್ತು ಸಂಶೋಧನಾ ಪ್ರಕಟಣೆಗಳಿಗೆ ಸೀಮಿತವಾಗಬಾರದು. ಅದು ಜನಸಾಮಾನ್ಯರ ಭಾಷೆಯಲ್ಲಿ ತಲುಪಬೇಕು. ಕನ್ನಡದಲ್ಲಿ ವೈಜ್ಞಾನಿಕವಾಗಿ ನಿಖರವಾದ ವೈದ್ಯಕೀಯ ಸಾಹಿತ್ಯ ಬೆಳೆಸುವ ಮೂಲಕ ಆರೋಗ್ಯ ಜಾಗೃತಿ ಮತ್ತು ಜ್ಞಾನವಂತ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡುವುದು ಈ ಸಮ್ಮೇಳನದ ಮುಖ್ಯ ಆಶಯ. ಈ ಎರಡು ದಿನಗಳ ಚರ್ಚೆಗಳು ಮುಂದಿನ ದಿನಗಳಲ್ಲಿ ಕನ್ನಡ ವೈದ್ಯಕೀಯ ಪದಕೋಶ, ಪುಸ್ತಕಗಳ ಪ್ರಕಟಣೆ, ಅನುವಾದ ಮತ್ತು ಡಿಜಿಟಲ್ ಜ್ಞಾನ ಸಂಪನ್ಮೂಲಗಳ ಅಭಿವೃದ್ಧಿಗೆ ಪ್ರೇರಣೆಯಾಗಲಿವೆ. ಸಾಹಿತಿ ಹಾಗೂ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಸಮಾರೋಪ ಸಮಾರಂಭದಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕುಲಪತಿ ಡಾ. ಭಗವಾನ್ ಬಿ.ಸಿ. ತಿಳಿಸಿದರು.





