– ರಾಘವೇಂದ್ರ ಅಡಿಗ ಎಚ್ಚೆನ್.
ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ನಟ ರಿಷಬ್ ಶೆಟ್ಟಿ ಅವರನ್ನು ಪ್ರವಾಸೋದ್ಯಮ ಪ್ರಚಾರ ರಾಯಭಾರಿಯಾಗಿ ನೇಮಕ ಈ ಕುರಿತು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಪ್ರತ್ಯೇಕ ನೀತಿ ರೂಪಿಸುವ ಕುರಿತು ಚರ್ಚೆ ನಡೆಸಲಾಗಿದ್ದು, ಈ ನೀತಿಗೆ ಸಂಬಂಧಿಸಿದ ಅಂತಿಮ ನಿರ್ಧಾರವನ್ನು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಇದೆ. ಸರ್ಕಾರವು ಮುಂದಿನ 20 ದಿನಗಳೊಳಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುವ ಬಗ್ಗೆ ಚಿಂತನೆ ನಡೆಸಿದೆ.
ಸಭೆಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಪ್ರವಾಸಿಗರನ್ನು ಆಕರ್ಷಿಸಲು ವಿಶೇಷ ಯೋಜನೆಗಳನ್ನು ಜಾರಿಗೊಳಿಸುವ ಕುರಿತು ಚರ್ಚಿಸಲಾಯಿತು.
ಇದೇ ವೇಳೆ ಕರಾವಳಿ ಭಾಗದಲ್ಲಿ ಹೋಂಸ್ಟೇಗಳ ನಿರ್ವಹಣೆಗೆ ಜಾರಿಯಲ್ಲಿರುವ ಕೆಲವು ನಿಯಮಗಳು ಪ್ರವಾಸೋದ್ಯಮ ಅಭಿವೃದ್ಧಿಗೆ ಅಡ್ಡಿಯಾಗುತ್ತಿವೆ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಆ ನಿಯಮಗಳನ್ನು ಸಡಿಲಗೊಳಿಸುವಂತೆ ಸರ್ಕಾರಕ್ಕೆ ಸಲಹೆ ನೀಡಲಾಗಿದೆ.
ಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹಿರಿಯ ಅಧಿಕಾರಿ ತುಷಾರ್ ಗಿರಿನಾಥ್ ಸೇರಿದಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.





