- ರಾಘವೇಂದ್ರ ಅಡಿಗ ಎಚ್ಚೆನ್.
ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್‌ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಪ್ರದೋಶ್‌ಗೆ ಮಾಫಿ ಸಾಕ್ಷಿ ಸ್ಥಾನಮಾನ ನೀಡಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಕೂಡ ಎತ್ತಿಹಿಡಿದಿತ್ತು.
ಪ್ರದೋಶ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸುವ ವೇಳೆ ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಸೂಕ್ತ ನಿಯಮಗಳನ್ನು ಪಾಲಿಸಿಲ್ಲ ಎಂದು ವಿಜಯಲಕ್ಷ್ಮಿ ಪರ ವಾದಿಸಲಾಗಿತ್ತು. ಅಲ್ಲದೆ, ಸಹ ಆರೋಪಿಗಳ ಗಮನಕ್ಕೆ ತರದೆ ಪ್ರದೋಶ್‌ಗೆ ಮಾಫಿ ಸಾಕ್ಷಿ ಸ್ಥಾನಮಾನ ನೀಡಲಾಗಿದೆ ಎಂದು ಪ್ರಶ್ನಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಮೊದಲು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ವಿಜಯಲಕ್ಷ್ಮಿ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ವೇಳೆ ಎರಡೂ ಕಡೆಯ ವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್, ಪ್ರದೋಶ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್‌ನ ನಿರ್ಧಾರದಲ್ಲಿ ಯಾವುದೇ ಕಾನೂನುಬಾಹಿರ ಅಂಶ ಕಂಡುಬಂದಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಪ್ರದೋಶ್ ಇದೀಗ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ನ್ಯಾಯಾಲಯದ ಮುಂದೆ ಹೇಳಿಕೆ ದಾಖಲಿಸಿರುವುದರಿಂದ, ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಗಳ ಮೇಲೂ ಈ ಬೆಳವಣಿಗೆ ಮಹತ್ವದ ಪರಿಣಾಮ ಬೀರುವ ಸಾಧ್ಯತೆಯಿದೆ.





