- ರಾಘವೇಂದ್ರ ಅಡಿಗ ಎಚ್ಚೆನ್.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಪ್ರಕಟಿಸಿದೆ. ಹಲವು ಊಹಾಪೋಹಗಳಿಗೆ ತೆರೆ ಎಳೆದಿರುವ ಯಶ್, ಆಗಸ್ಟ್ 26ರಂದು ವಿಶ್ವದಾದ್ಯಂತ ಚಿತ್ರವನ್ನು ಅದ್ಧೂರಿಯಾಗಿ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.
ಮೊದಲಿಗೆ ಜೂನ್ 4ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಜಾಗತಿಕ ಮಾರುಕಟ್ಟೆಯನ್ನು ಗಮನದಲ್ಲಿಟ್ಟುಕೊಂಡು ಚಿತ್ರತಂಡ ಬಿಡುಗಡೆ ದಿನಾಂಕವನ್ನು ಮುಂದೂಡಿತ್ತು. ಇತ್ತೀಚೆಗೆ ಅಮೆರಿಕದ ಲಾಸ್ ವೇಗಾಸ್‌ನಲ್ಲಿ ನಡೆದ ಪ್ರತಿಷ್ಠಿತ ‘ಸಿನಿಮಾಕಾನ್’ ಕಾರ್ಯಕ್ರಮದಲ್ಲಿ ಚಿತ್ರಕ್ಕೆ ದೊರೆತ ಭರ್ಜರಿ ಪ್ರತಿಕ್ರಿಯೆಯ ಬಳಿಕ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿತರಣೆಯನ್ನು ಮತ್ತಷ್ಟು ವಿಸ್ತರಿಸುವ ಯೋಜನೆ ರೂಪಿಸಲಾಗಿದೆ.
ಜಾಗತಿಕ ಮಾರುಕಟ್ಟೆಗೆ ಟಾಕ್ಸಿಕ್ ಸಜ್ಜು
ಹಾಲಿವುಡ್ ಹಾಗೂ ಅಂತರರಾಷ್ಟ್ರೀಯ ವಿತರಕರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ, ದೊಡ್ಡ ವಿತರಣಾ ಸಂಸ್ಥೆಗಳೊಂದಿಗೆ ಒಪ್ಪಂದ ಪ್ರಕ್ರಿಯೆ ನಡೆಸಲು ಹೆಚ್ಚಿನ ಸಮಯ ಬೇಕಾದ ಕಾರಣ ಚಿತ್ರವನ್ನು ಆಗಸ್ಟ್‌ಗೆ ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ವದಂತಿಗಳಿಗೆ ಬ್ರೇಕ್
ಚಿತ್ರದ ಬಿಡುಗಡೆ ವಿಳಂಬವಾಗುತ್ತಿದ್ದಂತೆ ಮರುಚಿತ್ರೀಕರಣ ನಡೆಯುತ್ತಿದೆ, ನಿರ್ದೇಶಕಿ ಗೀತು ಮೋಹನ್‌ದಾಸ್ ಮತ್ತು ಯಶ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಆದರೆ ಬಿಡುಗಡೆ ದಿನಾಂಕ ಘೋಷಿಸುವ ಮೂಲಕ ಯಶ್ ಮತ್ತು ಚಿತ್ರತಂಡ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ.
ಚಿತ್ರ ಈಗಾಗಲೇ ಪೂರ್ಣಗೊಂಡಿದ್ದು, ಜಾಗತಿಕ ಮಟ್ಟದ ಪ್ರಚಾರ ಹಾಗೂ ಬಿಡುಗಡೆಯ ಯೋಜನೆಗಳ ಕೆಲಸಗಳು ಮಾತ್ರ ನಡೆಯುತ್ತಿವೆ ಎಂದು ಚಿತ್ರತಂಡ ಸ್ಪಷ್ಟಪಡಿಸಿದೆ.

ಬಹುಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆ
ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಭಾರತೀಯ ಚಿತ್ರರಂಗದ ಬಹುದೊಡ್ಡ ಆಕ್ಷನ್ ಥ್ರಿಲ್ಲರ್‌ಗಳಲ್ಲಿ ಒಂದಾಗಿ ಮೂಡಿಬರುತ್ತಿದೆ. ವಿಶೇಷವೆಂದರೆ, ಚಿತ್ರವನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲದಲ್ಲಿ ನೇರವಾಗಿ ಚಿತ್ರೀಕರಿಸಲಾಗಿದೆ. ಜೊತೆಗೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲೂ ಏಕಕಾಲಕ್ಕೆ ಬಿಡುಗಡೆಯಾಗಲಿದೆ.
ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ ಸೇರಿದಂತೆ ಹಲವು ಖ್ಯಾತ ನಟ-ನಟಿಯರು ಅಭಿನಯಿಸಿದ್ದಾರೆ. ಒಟ್ಟಾರೆ, ಆಗಸ್ಟ್ 26ರಂದು ‘ಟಾಕ್ಸಿಕ್’ ಮೂಲಕ ಯಶ್ ಮತ್ತೊಮ್ಮೆ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ





