ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (AIUTUC) ನೇತೃತ್ವದಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ 7ನೇ ದಿನಕ್ಕೆ ಕಾಲಿಟ್ಟಿದ್ದು, ಚಳಿ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಇದುವರೆಗೆ 17 ಮಂದಿ ಕಾರ್ಯಕರ್ತೆಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನವೆಂಬರ್ 17ರಂದು ಆರಂಭವಾದ ಈ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದು, ಕಾರ್ಯಕರ್ತೆಯರ ಆರೋಗ್ಯದ ಮೇಲೆ ಪರಿಣಾಮ ಬೀರಿದೆ.
ಫ್ರೀಡಂ ಪಾರ್ಕ್ನಲ್ಲಿ ಕೊರೆಯುವ ಚಳಿ, ಗಾಳಿ ಹಾಗೂ ಕುಡಿಯುವ ನೀರು, ಶೌಚಾಲಯ ಮತ್ತು ವಿಶ್ರಾಂತಿ ವ್ಯವಸ್ಥೆಗಳ ಕೊರತೆಯ ನಡುವೆಯೇ ಹಗಲು-ರಾತ್ರಿ ಧರಣಿ ನಡೆಸುತ್ತಿರುವುದರಿಂದ ಹಲವರ ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರ ಜ್ವರ, ಉಸಿರಾಟದ ತೊಂದರೆ (ಅಸ್ತಮಾ), ವಾಕರಿಕೆ ಮತ್ತು ಅತಿಸಾರದಿಂದ ಬಳಲಿದ 17 ಕಾರ್ಯಕರ್ತೆಯರನ್ನು ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಮಾಸಿಕ ಗೌರವಧನವನ್ನು ₹15,000ಕ್ಕೆ ನಿಗದಿಪಡಿಸಬೇಕು, ನಿವೃತ್ತಿ ಹೊಂದುವ ಕಾರ್ಯಕರ್ತೆಯರಿಗೆ ₹5 ಲಕ್ಷ ಪರಿಹಾರ ನೀಡಬೇಕು, ಬಾಕಿ ಇರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಅಸಮರ್ಪಕವಾಗಿರುವ ಆನ್ಲೈನ್ ಮೌಲ್ಯಮಾಪನ ಪದ್ಧತಿಯನ್ನು (ASHAsoft) ಕೈಬಿಡಬೇಕು ಎಂಬುದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಈ ಹಿಂದೆ ನೀಡಿದ್ದ ₹10,000 ಗೌರವಧನದ ಭರವಸೆಯೇ ಇನ್ನೂ ಜಾರಿಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕಾರ್ಯಕರ್ತೆಯರು, ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿಗಳು ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮನವೊಲಿಸಲು ಪ್ರಯತ್ನಿಸಿದರೂ, ಅಧಿಕೃತ ಲಿಖಿತ ಆದೇಶದ ಪ್ರತಿ ಕೈ ಸೇರುವವರೆಗೂ ಧರಣಿ ಹಿಂಪಡೆಯುವುದಿಲ್ಲ ಎಂದು ಹೇಳಿದ್ದಾರೆ.





