ರಾಜ್ಯದಲ್ಲಿ ಸರಣಿ ಬಸ್ ಬೆಂಕಿ ಅವಘಡ ಮುಂದುವರಿದಿದೆ. ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿ 40 ಪ್ರಯಾಣಿಕರಿದ್ದ ಬಸ್​ಗೆ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಚಿತ್ರದುರ್ಗ ಸಮೀಪ ನಡೆದ ಖಾಸಗಿ ಬಸ್ ಬೆಂಕಿ ದುರಂತ ನೆನಪಿನಿಂದ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತಷ್ಟು ದುರಂತಗಳಾಗುತ್ತಿವೆ. ಬೆಂಗಳೂರು ಸಮೀಪ ನೆಲಮಂಗಲದಲ್ಲಿ ಮತ್ತೊಂದು ಖಾಸಗಿ ಬಸ್ ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ನಡೆದಿದೆ.

ಸಂಜನಾ ಟ್ರಾವೆಲ್ಸ್ ಗೆ ಸೇರಿದ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡು ಸಂಪೂರ್ಣ ಬಸ್ ಸುಟ್ಟು ಕರಕಲಾಗಿದೆ.ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ‘ಸಂಜನಾ ಟ್ರಾವೆಲ್ಸ್’ಗೆ ಸೇರಿದ ಬಸ್ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ.

ಹೆದ್ದಾರಿ ಕಾಮಗಾರಿ ಹಿನ್ನೆಲೆ ಬಸ್ ನಿಧಾನವಾಗಿ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

ಬಸ್ ಹೊತ್ತಿ ಉರಿದು ಬಸ್ ನಲ್ಲಿದ್ದ ಲಗೇಜ್, ಬೆಲೆಬಾಳುವ ವಸ್ತುಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಬಂದ ನೆಲಮಂಗಲ ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ನೆಲಂಮಗಲ ಸಂಚಾರಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ