ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಬಯಲು ಸೀಮೆಗೆ ಜೀವಜಲ ಹರಿಸುವ ರಾಜ್ಯ ಸರ್ಕಾರದ ಸಂಕಲ್ಪ ಸಾಕಾರಗೊಂಡಿದೆ. ಈ ಐತಿಹಾಸಿಕ ಸಾಧನೆಯ ಸಂಕೇತವಾಗಿ ಇದೇ ಸೆಪ್ಟೆಂಬರ್ 24ರಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಿತ್ರದುರ್ಗಕ್ಕೆ ಆಗಮಿಸಿ ಭದ್ರಾ ಜಲಕ್ಕೆ ಗಂಗಾಪೂಜೆ ನೆರವೇರಿಸಲಿದ್ದಾರೆ. ಬಳಿಕ ಬೃಹತ್ ಸಾರ್ವಜನಿಕ ಸಮಾರಂಭ ಆಯೋಜಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ಚಿತ್ರದುರ್ಗ ನಗರದ ದಾವಣಗೆರೆ ರಸ್ತೆಯಲ್ಲಿರುವ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿ, ಯೋಜನೆ ಮತ್ತು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಧ್ಯಮದವರೊಂದಿಗೆ ಅವರು ಮಾಹಿತಿ ಹಂಚಿಕೊಂಡರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕೆಗಳು ವ್ಯಕ್ತವಾಗಿದ್ದರೂ, ಆ ಎಲ್ಲಾ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುವ ಜೊತೆಯಲ್ಲೇ ಸರ್ಕಾರ ನೀರಾವರಿ ಯೋಜನೆಗಳಿಗೂ ಹೆಚ್ಚಿನ ಆದ್ಯತೆ ನೀಡಿದೆ. ಇತರ ರಾಜ್ಯಗಳು ಭರವಸೆಗಳನ್ನು ಈಡೇರಿಸಲು ಪರದಾಡುತ್ತಿದ್ದರೆ, ನಮ್ಮ ಸರ್ಕಾರ ಬರಗಾಲ ಹೊದ್ದು ಮಲಗಿದ್ದ ಚಿತ್ರದುರ್ಗಕ್ಕೆ ಭದ್ರೆಯ ನೀರು ಹರಿಸುವ ಮೂಲಕ ತನ್ನ ಬದ್ಧತೆ ಮೆರೆದಿದೆ ಎಂದು ಹೇಳಿದರು.
ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಗೆ 3 ಟಿಎಂಸಿ ನೀರನ್ನು ಪ್ರಾಯೋಗಿಕವಾಗಿ ಹರಿಸಲಾಗುತ್ತಿದೆ. ಪ್ರಸಕ್ತ ವರ್ಷದ ನವೆಂಬರ್-ಡಿಸೆಂಬರ್ ಒಳಗೆ ತುಂಗಾ ನದಿಯಿಂದ 17.5 ಟಿಎಂಸಿ ನೀರನ್ನು ಲಿಫ್ಟ್ ಮಾಡುವ ಮೂಲಕ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಯಶಸ್ವಿಗೊಳಿಸಲು ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದಕ್ಕಾಗಿ ಅರಣ್ಯ ಇಲಾಖೆಯ ಕ್ಲಿಯರೆನ್ಸ್ ಪಡೆದು ವಿದ್ಯುತ್ ಟವರ್‍ಗಳ ಕಾಮಗಾರಿಯನ್ನು ಚುರುಕುಗೊಳಿಸಲಾಗಿದೆ ಎಂದರು.
ಈ ಮಹತ್ವಾಕಾಂಕ್ಷೆಯ ಯೋಜನೆಗೆ ಕೇಂದ್ರ ಸರ್ಕಾರದ ಅಸಹಕಾರ ಎದ್ದು ಕಾಣುತ್ತಿದೆ. ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ರೂ.5,300 ಕೋಟಿ ಅನುದಾನವನ್ನು ಈವರೆಗೂ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರವೇ ಈಗಾಗಲೇ 12 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ತಿಳಿಸಿದ ಅವರು, ಇದೇ ವೇಳೆ, ಯಾವುದೇ ಇತರ ಅಭಿವೃದ್ಧಿ ಅನುದಾನವನ್ನು ಕೇಳದೆ ಕೇವಲ ಜಿಲ್ಲೆಗೆ ನೀರು ಹರಿಸುವಂತೆ ಪಟ್ಟು ಹಿಡಿದಿದ್ದ ದಿವಂಗತ ಸಚಿವ ಡಿ. ಸುಧಾಕರ್ ಅವರ ಕಳಕಳಿಯನ್ನು ಸಚಿವ ಚಲುವರಾಯಸ್ವಾಮಿ ಅವರು ಸ್ಮರಿಸಿದರು.
ಐತಿಹಾಸಿಕ ಸಂದರ್ಭ: ಸೆಪ್ಟೆಂಬರ್ 24ರಂದು ನಡೆಯಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮವು ಈ ಭಾಗದ ಜನರ ದಶಕಗಳ ಕನಸು ನನಸು ಮಾಡುವ ಹಾಗೂ ಹೊಸ ಇತಿಹಾಸ ನಿರ್ಮಿಸುವ ಅತ್ಯಂತ ಮಹತ್ವದ ಸಂದರ್ಭವಾಗಿದೆ ಎಂದು ಜಲಸಂಪನ್ಮೂಲ ಸಚಿವರು ತಿಳಿಸಿದರು.
ಗಂಗಾಪೂಜೆ ಕಾರ್ಯಕ್ರಮವು ಸರ್ಕಾರದ ಈ ಸಾಧನೆಯ ಕೈಗನ್ನಡಿಯಾಗಲಿದ್ದು, ಇದನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡದ ಅವರು, ಶಿಷ್ಟಾಚಾರ ಉಲ್ಲಂಘನೆಯಾಗದಂತೆ, ಸಾರ್ವಜನಿಕರಿಗೆ ಯಾವುದೇ ಟ್ರಾಫಿಕ್ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಲು ತಿಳಿಸಿದರು.





