ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಪ್ರಜಾಸೇವಾ ಆಂದೋಲನಾ ಸಭೆಗಳಲ್ಲಿ ಸಲ್ಲಿಕೆಯಾದ ಅರ್ಜಿಗಳ ಪೈಕಿ ಹೆಚ್ಚಿನ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಆದರೆ ಕೇವಲ ಅರ್ಜಿ ವಿಲೇವಾರಿಯಷ್ಟೇ ಅಲ್ಲದೆ, ಸಾರ್ವಜನಿಕರ ಸಮಸ್ಯೆಗಳಿಗೆ ನಿಜವಾದ ಪರಿಹಾರ ಸಿಗಬೇಕು ಹಾಗೂ ಕಾನೂನು ತೊಡಕುಗಳಿರುವ ಪ್ರಕರಣಗಳ ಹೊರತುಪಡಿಸಿ ಉಳಿದ ಕೆಲಸಗಳು ಕಾಲಮಿತಿಯಲ್ಲಿ ಆಗಬೇಕು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹೊಸದುರ್ಗ ತಾಲೂಕು ಆಡಳಿತದ ವತಿಯಿಂದ ಹೊಸದುರ್ಗದ ಅಶೋಕ ರಂಗಮಂದಿರದಲ್ಲಿ ಆಯೋಜಿಸಿದ್ದ ‘ಪ್ರಜಾಸೇವಾ ಆಂದೋಲನ’ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ಆರು ತಾಲೂಕುಗಳಲ್ಲಿ ಶಾಸಕರು ಹಾಗೂ ಅಧಿಕಾರಿಗಳ ನೇತೃತ್ವದಲ್ಲಿ ಇದುವರೆಗೂ ನಡೆದ ಪ್ರಜಾಸೇವಾ ಆಂದೋಲನದಲ್ಲಿ, ಸಾರ್ವಜನಿಕರಿಂದ ಸುಮಾರು 770 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 759 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಹಿರಿಯೂರು ಹಾಗೂ ಹೊಳಲ್ಕೆರೆ ತಾಲೂಕಿನಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರಜಾಸೇವಾ ಆಂದೋಲನದಲ್ಲಿ, ಹಿರಿಯೂರಿಗೆ ಸಂಬಂಧಿಸಿದಂತೆ ಒಟ್ಟು 287 ಅರ್ಜಿಗಳು ಬಂದಿದ್ದು, ಅದರಲ್ಲಿ 282 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ ಒಟ್ಟು 66 ಅರ್ಜಿಗಳು ಸಲ್ಲಿಕೆಯಾಗಿದ್ದು, 64 ಅರ್ಜಿಗಳನ್ನು ಯಶಸ್ವಿಯಾಗಿ ವಿಲೇವಾರಿ ಮಾಡಲಾಗಿದೆ. ಇನ್ನೂ ಮುಂದುವರೆದು ಜಿಲ್ಲಾ ಹಾಗೂ ತಾಲೂಕು ಮಟ್ಟದ ಕೆ.ಡಿ.ಪಿ ಸಭೆಗಳಲ್ಲಿ ಈ ಅರ್ಜಿಗಳ ವಿಲೇವಾರಿ ಕುರಿತು ವಿಸ್ತೃತವಾಗಿ ಚರ್ಚಿಸಲಾಗುವುದು ಎಂದರು.
ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಯಿತು. ಅಧಿಕಾರ ಹಸ್ತಾಂತರಿಸಿದ ಬಳಿಕ ಈಗಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡು ‘ಪ್ರಜಾಸೇವಾ ಆಂದೋಲನ’ ಎಂಬ ವಿಶೇಷ ಕಾರ್ಯಕ್ರಮ ರೂಪಿಸಿದ್ದಾರೆ. ಈ ಖಾತೆಯನ್ನು ಸ್ವತಃ ಮುಖ್ಯಮಂತ್ರಿಗಳೇ ನಿರ್ವಹಿಸುತ್ತಿದ್ದಾರೆ. ಹಿಂದೆ ಜನಸ್ಪಂದನ ಸಭೆಗಳು ಕೇವಲ ಸಾಂಪ್ರದಾಯಿಕವಾಗಿ ನಡೆಯುತ್ತಿದ್ದವು, ಆದರೆ ಈಗ ಈ ಕಾರ್ಯಕ್ರಮ ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ತಾಲೂಕು ಮಟ್ಟದಿಂದ ಹಿಡಿದು ಜಿಲ್ಲಾ ಮತ್ತು ರಾಜ್ಯ ಮಟ್ಟದವರೆಗೆ ಇದರ ನಿರ್ವಹಣೆ ನಡೆಯಲಿದ್ದು, ಅಧಿಕಾರಿಗಳು ನಿರ್ಲಕ್ಷ್ಯ ವಹಿಸದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಬರಗಾಲ ಬಂದಂತಹ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ತೋಟಗಾರಿಕೆ, ಕೃಷಿ ಹಾಗೂ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸಿ ಸರ್ಕಾರದ ಗಮನಕ್ಕೆ ತಂದಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ರೈತರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಬಿತ್ತನೆ ಮಾಡದವರಿಗೂ ಸಹ ಇನ್ಸುರೆನ್ಸ್ ದೊರೆಯಲಿದೆ. ಇದಕ್ಕಾಗಿ ಪ್ರತ್ಯೇಕವಾಗಿ ಸುಮಾರು 207 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯ ಮೂಲಕ ಭದ್ರಾ ಜಲಾಶಯದಿಂದ ನೀರು ಹರಿಸಲಾಗಿದೆ.
ಮುಂದಿನ ದಿನಗಳಲ್ಲಿ ಪ್ರತಿ ವರ್ಷವೂ 29.9 ಟಿಎಂಸಿ ನೀರನ್ನು ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗುವುದು. ತಾಲೂಕಿನ ಜನತೆ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ನೀರಾವರಿ ವ್ಯವಸ್ಥೆ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ಇದು ಶಾಶ್ವತವಾದ ವ್ಯವಸ್ಥೆಯಾಗಿದ್ದು, ಮೋಟಾರ್ ಅಥವಾ ಕ್ಯಾನಲ್ ಮೂಲಕ ನೀರು ಪಡೆಯುವ ಯೋಜನೆಗೆ ಯಾವುದೇ ರೀತಿಯ ಹಾನಿ ಉಂಟು ಮಾಡಬಾರದು ಎಂದು ಎಚ್ಚರಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಾದ ಟಿ.ರಘುಮೂರ್ತಿ ಅವರ ಮಾರ್ಗದರ್ಶನದಲ್ಲಿ ಪ್ರಜಾಸೇವಾ ಆಂದೋಲನ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸಾರ್ವಜನಿಕರು ಖಾತೆ ಬದಲಾವಣೆ, ನಿವೇಶನ, ಹಕ್ಕುಪತ್ರಗಳು, ಪಿಂಚಣಿ ಅಥವಾ ಇತರೆ ಆಡಳಿತಾತ್ಮಕ ಕೆಲಸಗಳು ಇವುಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಬಹುದು. ಎಲ್ಲಾ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿದ್ದು, ಅರ್ಜಿಗಳನ್ನು ಪಡೆದುಕೊಂಡು, ಅವುಗಳಿಗೆ ಶೀಘ್ರದಲ್ಲೇ ಪರಿಹಾರ ಒದಗಿಸಲಿದ್ದಾರೆ ಎಂದು ತಿಳಿಸಿದರು.
ಕೃಷಿ, ತೋಟಗಾರಿಕೆ, ಆರೋಗ್ಯ, ಅರಣ್ಯ, ಪಶು ಸೇವಾ ಹಾಗೂ ಪಶು ವೈದ್ಯಕೀಯ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಪಟ್ಟಣ ಪಂಚಾಯಿತಿ ಸೇರಿದಂತೆ ವಿವಿದ ಇಲಾಖೆಗಳ ವಸ್ತು ಪ್ರದರ್ಶನ ಮಳಿಗೆಗಳನ್ನು ಸಚಿವ ಟಿ.ರಘುಮೂರ್ತಿ ಉದ್ಘಾಟಿಸಿದರು. ಇದೇ ವೇಳೆ ಹೊಸದುರ್ಗ ಹಾಗೂ ಇತರ ಪಟ್ಟಣದ ಪ್ರದೇಶಗಳಲ್ಲಿ ಈಗಾಗಲೇ ಮನೆಗಳನ್ನು ಕಟ್ಟಿಕೊಂಡಿದ್ದು, ಇವರಿಗೆ ಜಾಗದ ಹಕ್ಕುಪತ್ರಗಳನ್ನು ವಿತರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರ್ಜಾತಿ ವಿವಾಹವಾದ ಜೋಡಿಗಳಿಗೆ ಪ್ರೋತ್ಸಾಹ ಧನ ಮಂಜೂರಾಗಿದ್ದು, ಎಫ್.ಡಿ.ಬಾಂಡ್ ವಿತರಿಸಲಾಯಿತು.





