ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ವಿವಾದಕ್ಕೆ ಒಳಗಾಗಿ ರದ್ದುಗೊಂಡಿದ್ದ NEET-UG 2026 ಪರೀಕ್ಷೆಯನ್ನು ಜೂನ್ 21ಕ್ಕೆ ಮತ್ತೊಮ್ಮೆ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಇಲಾಖೆ ತಿಳಿಸಿದೆ.
2026ರ ಜೂನ್ 14ರಿಂದ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಅಲ್ಲದೆ, ಹಾಲಿ ಇರುವ ಒಎಂಆರ್ ಆಧರಿತವಾಗಿಯೇ ಮರು ಪರೀಕ್ಷೆ ನಡೆಯಲಿದೆ.
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧರಿತ ಪರೀಕ್ಷೆ (ಸಿಬಿಟಿ) ಮಾದರಿಯನ್ನು ಅಳವಡಿಸಿಕೊಳ್ಳಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ಪ್ರಶ್ನೆಪತ್ರಿಕೆ ಸೋರಿಕೆ ಘಟನೆಯನ್ನು ಸರ್ಕಾರ ತೀವ್ರವಾಗಿ ಪರಿಗಣಿಸಿದೆ. ಸಿಬಿಐ ತನಿಖೆಯನ್ನು ವೇಗಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವುದು ನಮ್ಮ ಜವಾಬ್ದಾರಿ” ಎಂದು ಹೇಳಿದ್ದಾರೆ.
“ಸರ್ಕಾರ ಎಲ್ಲಾ ಆಕಾಂಕ್ಷಿಗಳೊಂದಿಗೆ ನಿಂತಿದೆ. ಪರೀಕ್ಷೆಯನ್ನು ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿ ನಡೆಸುವುದಕ್ಕೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಅವರು ಭರವಸೆ ನೀಡಿದ್ದಾರೆ.
2026ರ ಮೇ 3ರಂದು ನಡೆದ ಮೂಲ ಪರೀಕ್ಷೆಯಲ್ಲಿ ಉತ್ತರ ಭಾರತದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಎದ್ದಿದ್ದು, ಇದರ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಸಂಪೂರ್ಣ ರದ್ದುಗೊಳಿಸಲಾಗಿತ್ತು. ಪ್ರಸ್ತುತ ಸಿಬಿಐ ಈ ಪ್ರಕರಣದ ತನಿಖೆ ನಡೆಸುತ್ತಿದೆ.
ಮರು ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಂದ ಯಾವುದೇ ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುವುದಿಲ್ಲ ಎಂದು NAT ಸ್ಪಷ್ಟಪಡಿಸಿದೆ. ಈಗಾಗಲೇ ಅರ್ಜಿ ಸಲ್ಲಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೂ ಮರು ಪರೀಕ್ಷೆಗೆ ಅವಕಾಶವಿರುತ್ತದೆ.





